ಬೆಂಗಳೂರು, ಮೇ. ೧ : ರಾಜ್ಯದ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ತೊಂದರೆಯಾಗದಂತೆ ಕೆಲವೊಂದು ಕ್ರಮಗಳನ್ನು ಕೈಗೊಂಡು ಶಾಲೆಗಳ ಅಭಿವೃದ್ಧಿ ಮಾಡುವುದಾಗಿ ಅವರು ತಿಳಿಸಿದರು.
ಗುಜರಾತ್ ರಾಜ್ಯ ಸ್ಥಾಪನೆಯ ೫೦ ವರ್ಷಗಳ ಸುವರ್ಣ ಸಮಾರಂಭದಲ್ಲಿ ಭಾಗವಹಿಸಲು ಅಹಮದಬಾದ್‌ಗೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರೆತ ನಂತರ ಕೇಂದ್ರ ಸರ್ಕಾರ ಯಾವುದೇ ಹಣ ನೀಡಿಲ್ಲ. ರಾಜ್ಯ ಸರ್ಕಾರ ಇದಕ್ಕಾಗಿ ಮೀಸಲಿಟ್ಟಿರುವ ೫೦ ಕೋಟಿ ರೂ.ಗಳನ್ನು ಬಳಸಿಕೊಂಡು ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ಧಿ ಮಾಡಲಾಗುವುದು ಎಂದರು.
ತಮಿಳುನಾಡಿನಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚಲು ಅಲ್ಲಿನ ಸರ್ಕಾರ ಸೂಚಿಸಿರುವ ಬಗ್ಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಶಾಲೆಗಳು ಬಂದ್ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಸಂಪುಟ ಪುನರ್ ರಚನೆ ಇಲ್ಲ.
ರಾಜ್ಯ ಸಚಿವ ಸಂಪುಟವನ್ನು ಪುನರ್ ರಚಿಸುವ ಯಾವುದೇ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿ ಸದ್ಯಕ್ಕೆ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸುವುದಾಗಿ ಹೇಳಿದರು.
ಸಂಪುಟ ಪುನರ್ ರಚನೆಗಿಂತ ಮುಂಬರುವ ಬಜೆಟ್ ಅಧಿವೇಶನ ಸರ್ಕಾರ ೨ ವರ್ಷಗಳನ್ನು ಪೂರೈಸಿದ ಸಮಾರಂಭ ಆಚರಣೆಯತ್ತ ಲಕ್ಷ್ಯ ವಹಿಸಿರುವುದಾಗಿ ಅವರು ತಿಳಿಸಿದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿಗಳಿಗೆ ಹೆಚ್ಚಿನ ಹಾಸ್ಟೆಲ್ ನಿರ್ಮಾಣ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಈಗಾಗಲೇ ೧೬೦ ಹಾಸ್ಟೆಲ್ ನಿರ್ಮಾಣ ಕಾರ್ಯ ನಡೆದಿದೆ. ಮುಂದೆ ಇನ್ನು ನೂರು ಹಾಸ್ಟೆಲ್ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.