ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಒಳಗಡೆ ಸೋರುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿರುವ ಬಗ್ಗೆ ಹಾಗೂ ಮೂರನೇ ಮಹಡಿಯಲ್ಲಿ ಬೀಮ್‌ನಿಂದ ಸಿಮೆಂಟ್ ತುಂಡುಗಳು ಬೀಳುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಕೋರಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಲಾಗಿದ್ದು, ಸೆಪ್ಟಂಬರ್ 10, 1994 ರಿಂದ ಕಟ್ಟಡವು ಪ್ರಾರಂಭಗೊಂಡಿದೆ. ಈ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಒಳಗೊಂಡಂತೆ ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮತ್ತು ಜಿಲ್ಲಾ ಖಜಾನೆ ಇಲಾಖೆಗಳು ಕರ್ತವ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಕಚೇರಿಯ ಮೇಲ್ಛಾವಣಿಯ ದುರಸ್ತಿ ಕಾರ್ಯಗಳು ನಡೆಯುತ್ತಿರುತ್ತವೆ. ಆದರೆ ಕಳೆದ ಒಂದು ತಿಂಗಳಿನಿಂದ ಅತ್ಯಧಿಕ ಮಳೆಯಾಗುತ್ತಿದ್ದು, ದುರಸ್ತಿ ಕಾರ್ಯಗಳು ನಿಧಾನಗತಿಯಲ್ಲಿ ಸಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಕ್ರಮ ವಹಿಸಲಾಗುತ್ತಿದೆ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾಡಳಿತದ ಜಿಲ್ಲಾ ಸಂಕೀರ್ಣ ಕಟ್ಟಡವು ನಿರ್ಮಿಸಲಾಗುತ್ತಿದ್ದು, ಕಾಮಗಾರಿಯು ಅಂತಿಮ ಹಂತದಲ್ಲಿರುತ್ತದೆ ಎಂದು ಸಿಎಂ ಕಚೇರಿಯಿಂದ ಪ್ರಕಟಣೆ ಮೂಲಕ ತಿಳಿಸಿದ್ದಾರೆ.