ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರದ ರಾಜಭವನ, ಕಾಂಗ್ರೆಸ್ ಕಚೇರಿ ಸೇರಿ ವಿವಿಧೆಡೆ ಶನಿವಾರ ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಸಹಿತ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿ, ರಾಜ್ಯಪಾಲರು ಹಾಗೂ ಕೇಂದ್ರ ಸರಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗುವ ಜೊತೆಗೆ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.
ಮೈಸೂರು ಬಂದ್‌ಗೆ ಕರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿ ಆ.19 ರಂದು ಮೈಸೂರು ಬಂದ್‌ಗೆ ಕರ್ನಾಟಕ ಪ್ರದೇಶ ಕುರುಬರ ಸಂಘ, ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಪ್ರಗತಿಪರ ಸಂಘಟನೆಗಳು ಕರೆ ನೀಡಿದೆ.