ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

Sat, 27 Apr 2024 07:15:42  Office Staff   Vb

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ಮತದಾನ ಆಗಿದೆ. ಈ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಶೇ.81.48ರಷ್ಟು ಮತದಾನ ಆಗಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ ಶೇ.52.81ರಷ್ಟು ಮತದಾನವಾಗಿದೆ.

ಬೇಸಿಗೆಯ ಬಿಸಿಲಿನ ವಾತಾವರಣದ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಮುಂದಾದರು. ರಾಜಕೀಯ ನಾಯಕರು, ಸಿನೆಮಾ ತಾರೆಯರು, ಕ್ರೀಡಾಪಟುಗಳು, ಗಣ್ಯ ವ್ಯಕ್ತಿಗಳು ತಮ್ಮ-ತಮ್ಮ ಮತಗಟ್ಟೆಗಳಲ್ಲಿ ಜನ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ವಿಶೇಷವಾಗಿತ್ತು.

ರಾಜಧಾನಿ ಬೆಂಗಳೂರಿನ ಲೋಕಸಭಾ ಕ್ಷೇತ್ರಗಳಿಗಿಂತ ಗ್ರಾಮೀಣ ಭಾಗದ ಕ್ಷೇತ್ರಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಹುತೇಕ ಕಡೆ ಸಂಜೆ 6 ಗಂಟೆಯ ಸಮಯದಲ್ಲಿಯೂ ಮತದಾರರು ತಮ್ಮ ಹಕ್ಕು ಚಲಾಯಿಸಲು ಸಾಲಿನಲ್ಲಿ ನಿಂತಿದ್ದರು. ಕೇಂದ್ರ ಚುನಾವಣಾ ಆಯೋಗವು 14 ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಿತ್ತು.

ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರ: 14 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಟ್ಟು 247 ಅಭ್ಯರ್ಥಿಗಳ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದ್ದು, ಬಿಗಿ ಬಂದೋಬಸ್ತ್ ಮೂಲಕ ಮತಯಂತ್ರಗಳನ್ನು ಜಿಲ್ಲಾ ಕೇಂದ್ರಗಳಲ್ಲಿರುವ ಸ್ಟ್ರಾಂಗ್ ರೂಂಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯದ ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದ್ದು, ಜೂ.4ರಂದು ಮತಗಳ ಎಣಿಕೆ ನಡೆದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಸಹಾಯಕ ಮತಗಟ್ಟೆ ಅಧಿಕಾರಿ ಮೃತ್ಯು: ಚಿತ್ರದುರ್ಗ, ಎ.26: ಚುನಾವಣಾ ಕರ್ತವ್ಯದಲ್ಲಿದ್ದ ಸಹಾಯಕ ಮತಗಟ್ಟೆ ಅಧಿಕಾರಿ ಯಶೋದಮ್ಮ (58) ಹೃದಯಾಘಾತದಿಂದ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಮೇಗಳಗೊಲ್ಲರಹಟ್ಟಿಯಲ್ಲಿ ನಡೆದಿರುವುದು ವರದಿಯಾಗಿದೆ.

ಮುಂಜಾನೆ ಮತದಾನದ ಆರಂಭದ ವೇಳೆಯಲ್ಲಿ ಯಶೋದಮ್ಮಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಸೆಕ್ಟರ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆ ತಲುಪುವ ವೇಳೆಗಾಗಲೇ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ಯಶೋದಮ್ಮ ಮೃತಪಟ್ಟಿದ್ದಾರೆ ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ಆನಂದ ಮಾಹಿತಿ ನೀಡಿದ್ದಾರೆ.
 


Share: