ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / 'ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ' ಪ್ರಧಾನಿ ಜೊತೆ ಸಾರ್ವಜನಿಕ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

'ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ' ಪ್ರಧಾನಿ ಜೊತೆ ಸಾರ್ವಜನಿಕ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

Thu, 18 Jan 2024 19:11:48  Office Staff   Vb

ಬೆಂಗಳೂರು: ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿ ರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಪ್ರಧಾನಿಯವರು ಒಪ್ಪಿ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂ. ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂ.ಗೆ ಇಳಿಕೆಯಾಗಿದೆ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂ. ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿ ದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಈ ಶಿಫಾರಸನ್ನು ತಿರಸ್ಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ 1 ಮತ್ತು ಮಹಾದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಹಿರಿಯರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು. ಹದಿನೆಂಟು ಸಾವಿರ ಕೋಟಿ ರೂ.ಯ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರ ರೈಲ್ವೆ ಯೋಜನೆಗಳನ್ನು ಮೂಲೆಗೆ ತಳ್ಳಲಾಗಿದೆ ಎಂದು ಮುಖ್ಯಮಂತ್ರಿ ಟೀಕಿಸಿದ್ದಾರೆ.

ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ ಸಹಜವಾದ ನಿದ್ರಾ ಸ್ಥಿತಿ ಎನ್ನಲೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


Share: