ಶಿವಮೊಗ್ಗ, ಮಂಗಳವಾರ, 16 ಮಾರ್ಚ್: ರಾಜ್ಯದಲ್ಲಿ ಎರಡು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಕಂಡು ಬಂದಿದ್ದು, ಮುಂದಿನ ದಿನಗಳಲ್ಲಿ 5 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಯುಗಾದಿ ಪ್ರಯುಕ್ತ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ವಿದ್ಯುತ್ ಕೊರತೆ ನೀಗಿಸುವ ಸಂಬಂಧ ಸರ್ಕಾರ ಸೂಕ್ತವಾದ ಕ್ರಮ ಕೈಗೊಳ್ಳಲಿದೆ. ಪವನಶಕ್ತಿ, ಸೌರಶಕ್ತಿ ಬಳಕೆಗಳ ಬಗ್ಗೆ ಆದ್ಯತೆ ನೀಡಲಾಗುವುದು ಎಂದರು.
ಗೋಹತ್ಯೆ ನಿಷೇಧ ಕಾಯ್ದೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ರಾಜ್ಯದಲ್ಲೂ ಇದನ್ನು ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಬೆಂಗಳೂರಿನ ಇಸ್ರೋ ಕೇಂದ್ರದ ಮೇಲಿನ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುವುದು. ಇಡೀ ಘಟನೆಯನ್ನು ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಸೌಜನ್ಯ: ೨೪ ದುನಿಯಾ