ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಂಕೋಲಾ ಗುಡ್ಡ ಕುಸಿದು ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ; ಸರ್ಕಾರದಿಂದ ಘೋಷಣೆ

ಅಂಕೋಲಾ ಗುಡ್ಡ ಕುಸಿದು ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ; ಸರ್ಕಾರದಿಂದ ಘೋಷಣೆ

Wed, 17 Jul 2024 03:19:58  Office Staff   SOnews

 

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಏಳು ಜನ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5ಲಕ್ಷ ರೂ.ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 

ಮಂಗಳವಾರ ವಿಧಾನಸಭೆಯಲ್ಲಿ ಅಂಕೋಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನಕ್ಕೆ ಮಾಹಿತಿ ನೀಡಿದ ಅವರು, ನದಿ ಹಾಗೂ ಗುಡ್ಡದ ನಡುವೆ ರಾಷ್ಟ್ರೀಯ ಹೆದ್ದಾರಿ ಇದ್ದು, ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕೆಲವರು ಸಣ್ಣ ಮಟ್ಟದ ಕ್ಯಾಂಟೀನ್‍ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಅಡುಗೆ ಅನಿಲ ಹೊತ್ತೊಯ್ಯುವ ಟ್ಯಾಂಕರ್ ಚಾಲಕರು ಟೀ ಕುಡಿಯಲು ವಾಹನ ನಿಲ್ಲಿಸಿದ್ದಾಗ ಅವಘಡ ಸಂಭವಿಸಿದೆ ಎಂದು ಹೇಳಿದರು.

ಗುಡ್ಡ ಕುಸಿದು ಅನಿಲ ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆಯ ವೇಳೆ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಅವರು ಹೇಳಿದರು.  ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಅಗ್ನಿಶಾಮಕ ದಳ ಹಾಗೂ ಎನ್‍ಡಿಆರ್‍ಎಫ್ ತುಕಡಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೂ ಸ್ಥಳಕ್ಕೆ ಧಾವಿಸಿದ್ದಾರೆ. ಭಾರತೀಯ ಪೆಟ್ರೋಲಿಯಂ ಲಿಮಿಟೆಡ್‍ನ ಅಧಿಕಾರಿಗಳೂ ಸ್ಥಳದಲ್ಲಿ ಇದ್ದು, ನೀರಿನಲ್ಲಿ ಕೊಚ್ಚಿಹೋಗಿರುವ ಟ್ಯಾಂಕರ್ ಅನ್ನು ಸುರಕ್ಷಿತವಾಗಿ ಹೊರತೆಗೆಯುವ ಕೆಲಸವೂ ಪ್ರಗತಿಯಲ್ಲಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.  ಟ್ಯಾಂಕರ್ ಚಾಲಕರು ನಮ್ಮ ರಾಜ್ಯದರಲ್ಲ ಎಂಬುದು ತಿಳಿದು ಬಂದಿದೆ. ಆದರೂ, ಅವರು ಕೆಲಸದ ಮೇಲೆ ನಮ್ಮ ರಾಜ್ಯಕ್ಕೆ ಬಂದಿದ್ದು, ಈ ವೇಳೆ ದುರಾದೃಷ್ಟವಶಾತ್ ಅಪಘಾತ ಸಂಭವಿಸಿದೆ. ಹೀಗಾಗಿ ಅವರಿಗೂ ಪರಿಹಾರ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಮಾತುಕತೆ: ಕಳೆದ ವರ್ಷ ಅತಿವೃಷ್ಟಿಯ ಸಂದರ್ಭದಲ್ಲೇ ನಾನು ಈ ಭಾಗಕ್ಕೆ ತೆರಳಿದ್ದೆ. ರಾಷ್ಟ್ರೀಯ ಹೆದ್ದಾರಿಗಳು ವೈಜ್ಞಾನಿಕವಾಗಿ ನಿರ್ಮಾಣವಾಗಿಲ್ಲ. ಅಲ್ಲದೆ, ಸೀಬರ್ಡ್ ಕಾಲುವೆಗಳೂ ಕ್ರಮಬದ್ಧವಾಗಿಲ್ಲ. ಹೀಗಾಗಿ ಭೂ ಕುಸಿತ ಸಂಭವಿಸುವ ಬಗ್ಗೆ ಆಗಲೇ ಎಚ್ಚರಿಕೆ ನೀಡಿದ್ದೆ. ಆದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತಿಗೆ ಕಿವಿಕೊಡುವ ಗೋಜಿಗೇ ಹೋಗಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದರು.   ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದೇ ಇಲ್ಲ. ನಾವು ಏನೇ ಹೇಳಿದರೂ, ನಮ್ಮ ಕೇಂದ್ರ ಕಚೇರಿ ದಿಲ್ಲಿಯಲ್ಲಿದೆ, ಅಲ್ಲಿಗೆ ಪತ್ರ ಬರೆಯುತ್ತೇವೆ ಎಂದಷ್ಟೇ ಹೇಳಿ ಕೈ ತೊಳೆದುಕೊಳ್ಳುತ್ತಾರೆ. ಆದರೆ, ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.   ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಇಂದೇ ಕರೆಸಿ ಘಟನೆಯ ಬಗ್ಗೆ ಮಾತನಾಡಲಾಗುವುದು. ಸರಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಪತ್ರ ಬರೆಯಲಾಗುವುದು. ಅಲ್ಲದೆ, ಅಧಿವೇಶನದ ಸಂದರ್ಭದಲ್ಲೆ ಸಿಎಂ ಸಮ್ಮುಖದಲ್ಲಿ ಸಭೆಯನ್ನು ನಡೆಸಿ, ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲ ಸೂಕ್ತ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಭಂದಿಸಿದಂತೆ ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕರಾದ ಸತೀಶ್ ಸೈಲ್ ಹಾಗೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಲಾಯಿತು.

mank.jpg

mank2.jpg

ಈಗಾಗಲೇ ಈ ದುರ್ಘಟನೆಯಲ್ಲಿ ಮಣ್ಣಿನಡಿ ಸಿಲುಕಿದ ಐದು ಮೃತ ದೇಹಗಳನ್ನು ಹೊರ ತೆಗೆದಿದ್ದು ಇನ್ನುಳಿದ ಮೃತ ದೇಹಗಳಿಗಾಗಿ ಶೋಧ ಕಾರ್ಯಾ ನಡೆಯುತ್ತಿದೆ. ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಸರಕಾರ ಘೋಷಣೆ ಮಾಡಿದ್ದು, ನಮ್ಮ ಜಿಲ್ಲೆಯಲ್ಲಿ ಇಂತಹ  ದುರ್ಘಟನೆ ನಡೆದಿದ್ದು ಮನಸಿಗ್ಗೆ ತುಂಬಾನೇ ನೋವುಂಟು ಮಾಡಿದೆ. ಜಿಲ್ಲೆಯಲ್ಲಿ  ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿ ಈ ಘಟನೆಗೆ ಕಾರಣವಾಗಿದ್ದು. ಇದಕ್ಕೆ ಸಂಭಂದಿಸಿದಂತೆ ಕಾಮಗಾರಿ ನಡೆಸಿದ ಕಂಪನಿ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿದ್ದು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.-ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ

 

ಅಂಕೋಲಾ ಠಾಣಾ ವ್ಯಾಪ್ತಿಯ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೃತಪಟ್ಟವರ ಮೃತದೇಹ ಗೋಕರ್ಣ ಠಾಣಾ ವ್ಯಾಪ್ತಿಯ ಗಂಗೆಕೊಳ್ಳ ಹಾಗೂ ದುಬ್ಬನಶಸಿಯ ಹತ್ತಿರ ಸಮುದ್ರದಲ್ಲಿ ಸಿಕ್ಕಿವೆ ಮಾಹಿತಿ ಹೀಗಿದೆ.

 1) ಶಾಂತಿ ಲಕ್ಷ್ಮಣ ನಾಯ್ಕ, ಪ್ರಾಯ : 36 ವರ್ಷ,

2) ಲಕ್ಷ್ಮಣ ತಂದೆ ಬೊಮ್ಮಯ್ಯ ನಾಯ್ಕ, ಪ್ರಾಯ : 42 ವರ್ಷ,

3) ರೋಷನ್ ತಂದೆ ಲಕ್ಷ್ಮಣ ನಾಯ್ಕ, ಪ್ರಾಯ: 9 ವರ್ಷ,  3 ಜನ ಸಾ!! ಶಿರೂರ, ಅಂಕೋಲಾ

4) ಗಂಡಸಿನ ಮೃತದೇಹ ಹೆಸರು ವಿಳಾಸ, ತಿಳಿದುಬಂದಿರುವದಿಲ್ಲಾ.


Share: