ಬೆಂಗಳೂರು, ಫೆ. 25: ಕೃಷಿ ವಲಯದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಮಾಡಿ ಹೆಚ್ಚು ಉತ್ಪನ್ನಗಳನ್ನು ಬೆಳೆದ ರಾಜ್ಯದ ೯೦ ಮಂದಿ ಪ್ರಗತಿ ಪರ ರೈತರಿಗೆ ಕೃಷಿ ಹಾಗೂ ಕೃಷಿ ಪಂಡಿತ ಪ್ರಶಸ್ತ್ತಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಪ್ರಧಾನ ಮಾಡಿದರು.
ನಂತರ ಅವರು, ಕೃಷಿ ವಲಯಕ್ಕೆ ವಿಶೇಷ ಆದ್ಯತೆ ನೀಡುವ ಜೊತೆಗೆ ಮುಂದಿನ ಮುಂಗಡ ಪತ್ರದಲ್ಲಿ ಇನ್ನಷ್ಟು ಯೋಜನೆಗಳನ್ನು ರೂಪಿಸಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.
ಕೈಗಾರಿಕಾ ಅಭಿವೃದ್ಧಿಗಾಗಿ ರಾಜ್ಯದ ಹಲವು ಭಾಗಗಳಲ್ಲಿ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ನುಮುಂದೆ ರೈತರ ಫಲವತ್ತಾದ ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ ಬಳಕೆಯಾಗದಂತೆ ಅಗತ್ಯವಾದ ಕ್ರಮವನ್ನು ಜರುಗಿಸುವುದಾಗಿ ಯಡಿಯೂರಪ್ಪ ಹೇಳಿದರು.
ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾದ ಭೂಮಿಯನ್ನು ಫಲವತ್ತಾದ ಕೃಷಿ ಭೂಮಿ ಹೊರತು ಪಡಿಸಿ ಖರೀದಿಸುವಂತೆ ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಸೂಚನೆ ನೀಡಲಾಗುವುದು ಎಂದರು.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಕೈಗಾರಿಕೆಗಳಿಗೆ ಕೃಷಿ ಭೂಮಿ ಸ್ವಾಧೀನಕ್ಕೆ ನಿರ್ಬಂಧನೆ ವಿಧಿಸಲಾಗುವುದು. ರಾಜ್ಯದ ಇತರ ಭಾಗಗಳಲ್ಲಿ ಕೈಗಾರಿಕಾ ಚಟುವಟಿಕೆ ವಿಸ್ತರಣೆಗೆ ಆದ್ಯತೆ ನೀಡಲಾಗುವುದು ಎಂದರು.