ಭಟ್ಕಳ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಹಿಂಪಡೆಯುವಂತೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ವಿಶೇಷವಾಗಿ ಕಾರಿಗೆ ಹಗ್ಗ ಕಟ್ಟಿ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಿ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಪೆಟ್ರೋಲ್, ಡಿಸೇಲ್ ಬೆಲೆಯನ್ನು ದಿಢೀರ್ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಉಂಟು ಮಾಡಿದೆ. ಬೇರೆ ಯಾವುದೇ ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡದಿದ್ದರೂ ಸಹ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುವ ಏಕೈಕ ಉದ್ದೇಶದಿಂದ ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದೆ. ಇದಕ್ಕೆ ಪುಷ್ಟಿ ಎಂಬಂತೆ ರಾಜ್ಯದ ಕೆಲ ಸಚಿವರು ಗ್ಯಾರಂಟಿ ಯೋಜನೆಯ ಹಣ ಹೊಂದಿಸುವ ಸಲುವಾಗಿಯೇ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ತೈಲ ಬೆಲೆ ಏರಿಕೆಯಿಂದ ದ್ವಿಚಕ್ರ ವಾಹನ, ಆಟೋ, ಟ್ಯಾಕ್ಸಿ, ಗೂಡ್ಸ್ ರಿಕ್ಷಾ ಸೇರಿದಂತೆ ವಿವಿಧ ವಾಹನ ಇದ್ದವರಿಗೆ ಹೊರೆಯಾಗಲಿದೆ. ತೈಲ ಬೆಲೆ ಏರಿಕೆಯಿಂದ ಎಲ್ಲಾ ಸಾಮಗ್ರಿಗಳ ಬೆಲೆ ಏರಿಕೆ ಆಗಲಿದ್ದು, ಜನರು ತೊಂದರೆ ಅನುಭವಿಸಲಿದ್ದಾರೆ. ಲೋಕಸಭೆ ಚುನಾವಣೆ ವರೆಗೂ ತೈಲ ಬೆಲೆ ಏರಿಕೆ ಮಾಡದ ಸರಕಾರ ಚುನಾವಣೆ ಮುಗಿದು ಫಲಿತಾಂಶ ಪ್ರಕಟ ಆದ ಬಳಿಕ ದಿಢೀರ್ ಆಗಿ ತೈಲ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ತೊಂದರೆ ಮಾಡಿದೆ. ರಾಜ್ಯದ ಜನತೆಯ ಹಿತದೃಷ್ಟಿಯಿಂದ ತೈಲ ಬೆಲೆ ಹೆಚ್ಚಿಸಿರುವುದನ್ನು ಕೂಡಲೇ ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ತಾವು ಸೂಚನೆ ನೀಡಬೇಕು.
ಪ್ರತಿಭಟನಾ ಮೆರವಣಿಗೆ ವೇಳೆ ಶಂಸುದ್ದಿನ್ ಸರ್ಕಲ್ ಸಮೀಪ ರಸ್ತೆ ತಡೆದು ಕೆಲಕಾಲ ಧರಣಿ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಹಾಯಕ ಆಯುಕ್ತೆ ಡಾ.ನಯನ ಮನವಿ ಸ್ವೀಕರಿಸಿದರು. ಈ ವೇಳೆ ತಹಶೀಲ್ದಾರ್ ನಾಗರಾಜ ನಾಯ್ಕಡ ಉಪಸ್ಥಿತರಿದ್ದರು
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಗೋವಿಂದ ನಾಯ್ಕ, ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ , ಆಸರಕೇರಿ, ಭಟ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ದಿನೇಶ ನಾಯ್ಕ, , ಶೇಷಗಿರಿ ನಾಯ್ಕ, ಶಿವಾನಿ ಶಾಂತಾರಾಮ, ಪಾಂಡುರಂಗ ನಾಯ್ಕ ಆಸರಕೇರಿ, ವೆಂಕಟೇಶ ನಾಯ್ಕ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.