ಹಾಸನ, ಡಿ.೧೨- ಚಾಮರಾಜನಗರ ಮತ್ತು ದಾವಣಗೆರೆಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ಕ್ರಮ ಖಂಡಿಸಿ ಹಾಸನದಲ್ಲಿ ರೈತ ಸಂಘದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದ ರೈತ ಸಂಘದ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆ ಕೂಗಿದರು. ರೈತರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದ ಯಡಿಯೂರಪ್ಪ, ಅನ್ನದಾತರ ಮೇಲೆ ದೌರ್ಜನ್ಯ ನಡೆಸಿರುವ ಕ್ರಮ ಖಂಡಿನೀಯ ಎಂದರು.
ನ್ಯಾಯ ಕೇಳಲು ಬಂದ ರೈತರ ಮೇಲೆ ದಮನಕಾರಿ ನೀತಿ ಮುಂದುವರೆಸಿರುವ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ ರೈತರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಮೇಲೆ ಪೊಲೀಸರ ಮೂಲಕ ದೌರ್ಜನ್ಯ ನಡೆಸುತ್ತಿರುವ ಪ್ರಕರಣ ಬಿಜೆಪಿ ಸರ್ಕಾರದಲ್ಲಿ ಪದೇ ಪದೇ ಸಂಭವಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನೇರ ಹೊಣೆಗಾರರು ಎಂದು ಕಿಡಿಕಾರಿದರು.
ರೈತ ಪರ ಯೋಜನೆಗಳನ್ನು ಅನುಷ್ಟಾನಕ್ಕೆ ತರುವ ಬದಲು ಪ್ರತಿನಿತ್ಯ ರೈತರಿಗೆ ತೊಂದರೆಯನ್ನೇ ನೀಡುತ್ತಿರುವ ಸರ್ಕಾರ ರೈತರನ್ನು ಮುಗಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಸರ್ಕಾರವನ್ನು ಕಿತ್ತೊಗೆಯಲು ರೈತ ಸಂಘ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ರೈತ ಮುಖಂಡ ಕಣಗಾಲ್ ಮೂರ್ತಿ ಎಚ್ಚರಿಸಿದರು.
ಇದೇ ವೇಳೆ ರೈತರ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ಮೇಲೆ ಶಿಸ್ತು ಕ್ರಮ ಕೈಗೊಂಡು ದೇಶಕ್ಕೆ ಅನ್ನ ನೀಡುವ ರೈತರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.