ಬೇಲೂರು, ನ.೨೯- ಬೇಲೂರಿನ ಚನ್ನಕೇಶವ ಸ್ವಾಮಿ ದೇವಾಲಯದ ಆಸ್ತಿ ಉಳಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ೩೩ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಟೋ ಚಾಲಕರು ಮತ್ತು ಮಾಲೀಕರ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಬೇಲೂರಿನ ಶ್ರೀ ಚನ್ನಕೇಶವ ದೇವಾಲಯ ಆಸ್ತಿ ಹಿತರಕ್ಷಣಾ ಸಮಿತಿಯವರು ಕರೆ ನೀಡಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಆಟೋ ಚಾಲಕರು ಮತ್ತು ಮಾಲೀಕರು ಧರಣಿ ಸತ್ಯಾಗ್ರಹ ನಡೆಸಿದರು.
ನೆಹರು ನಗರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಆಟೋ ಚಾಲಕರು ಅಕ್ರಮ ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಲಕಾಲ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಆವರಣ ತಲುಪಿದ ಪ್ರತಿಭಟನಾಕಾರರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡರು. ಆಟೋ ಚಾಲಕರು ಮತ್ತು ಮಾಲೀಕರು ಧರಣಿಯಲ್ಲಿ ಪಾಲ್ಗೊಂಡಿದ್ದ ಕಾರಣ ಭಾನುವಾರ ಪಟ್ಟಣದಲ್ಲಿ ಆಟೋಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಆಸ್ತಿಯನ್ನು ಅಕ್ರಮವಾಗಿ ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡು ಪ್ರವಾಸೋದ್ಯಮ ಇಲಾಖೆಗೆ ಕೋಟ್ಯಾಂತರ ರೂ.ಗಳಿಗೆ ಮಾರಾಟ ಮಾಡಿರುವವರ ವಿರುದ್ಧ ಮತ್ತು ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕಾನೂನು ರೀತ್ಯಾ ಕ್ರಮ ಕೈಗೊಂಡು ಅವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಲೋಕೇಶ್, ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆ.ಎಸ್.ಪೂರ್ಣೇಶ್, ಅಧ್ಯಕ್ಷ ಜಿ.ಕೆ.ಕುಮಾರ್, ವೈ.ಆರ್.ಭಾರತೀಗೌಡ, ಜಗದೀಶ್ ಶೆಟ್ಟಿ ಇತರರು ಪಾಲ್ಗೊಂಡಿದ್ದರು.